ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕೋವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿದ್ದಾರೆ.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಉಳಿದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಿ ಇನ್ನು ಹಲವು ವಾರ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಇಂತಹ ವದಂತಿಗೆ ಸಿಎಂ ತೆರೆ ಎಳೆದಿದ್ದಾರೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ ಒಂದು ವಾರದ ಲಾಕ್ಡೌನ್ ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಜನರು ಆತಂಕ ಪಡದೇ, ವದಂತಿಗೆ ಕಿವಿಗೊಡದೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಕೋರಿದ್ದಾರೆ.
ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ಡೌನ್ ವಿಧಿಸಲಾಗಿದ್ದು, ಒಂದು ವಾರದೊಳಗೆ ವ್ಯವಸ್ಥೆಗಳನ್ನು ಸರಿಪಡಿಸಿಕೊಂಡು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.