ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರದ ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ಹಾಕುವ ಮೂಲಕ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡುತ್ತಿದ್ದಾರೆ.
ಅದರಲ್ಲೂ ಕೇಂದ್ರ ಸರ್ಕಾರದ ಆರ್ಥಿಕ ನೀತಿ, ಕೊರೊನಾ ನಿಯಂತ್ರಣ ವೈಫಲ್ಯ ಮೊದಲಾದ ವಿಚಾರಗಳನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ವಿಡಿಯೋಗಳನ್ನು ಹಾಕುತ್ತಿದ್ದು, ಅವರ ವಿಡಿಯೋ ಒಂದು ಈಗ ಚರ್ಚೆಗೆ ಗ್ರಾಸವಾಗಿದೆ.
ಜುಲೈ 10 ರಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ರಾಹುಲ್ ಗಾಂಧಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾದ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿದ್ದರು. ಜುಲೈ 17ರಂದು ಮತ್ತೊಂದು ವಿಡಿಯೋ ಹಾಕಿದ್ದು ಇದರಲ್ಲಿ ಕೊರೊನಾ ಕುರಿತು ಮಾಹಿತಿ ಹಂಚಿಕೊಂಡಿದ್ದರು.
ಈ ವಿಡಿಯೋಗಳೇ ಈಗ ಚರ್ಚೆಗೆ ಕಾರಣವಾಗಿದ್ದು, ಜುಲೈ 10 ರ ವಿಡಿಯೋದಲ್ಲಿ ಸಣ್ಣದಾಗಿದ್ದ ರಾಹುಲ್ ಗಾಂಧಿ ತಲೆಗೂದಲು ಕೇವಲ ಏಳು ದಿನಗಳಲ್ಲಿ ಅಂದರೆ ಜುಲೈ 17ರ ವೇಳೆಗೆ ಅಷ್ಟು ವೇಗವಾಗಿ ಬೆಳೆದಿದೆಯೇ ಎಂಬ ಪ್ರಶ್ನೆ ಕೇಳಿಬರುತ್ತಿದೆ. ಹೀಗಾಗಿ ರಾಹುಲ್ ಗಾಂಧಿ ಮೊದಲೇ ಸಿದ್ಧಪಡಿಸಿಕೊಂಡಿದ್ದ ವಿಡಿಯೋಗಳನ್ನು ಸಂದರ್ಭಕ್ಕೆ ಅನುಸಾರವಾಗಿ ಹಾಕುತ್ತಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.