ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಭಾರತದಲ್ಲೂ ಇದು ಅಬ್ಬರಿಸುತ್ತಿದ್ದು, ಈಗಾಗಲೇ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಲಕ್ಷಾಂತರ ಮಂದಿ ಸೋಂಕು ಪೀಡಿತರಾಗಿದ್ದು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈ ಹಿಂದೆ ಕಠಿಣ ಲಾಕ್ಡೌನ್ ಜಾರಿ ಮಾಡಿದ್ದು, ಇದರಿಂದ ಸೋಂಕು ವ್ಯಾಪಿಸುವ ಪ್ರಮಾಣ ಕಡಿಮೆಯಾಯಿತಾದರೂ ಎಲ್ಲ ಕ್ಷೇತ್ರಗಳ ಮೇಲೆ ಪರಿಣಾಮ ಬೀರುವ ಮೂಲಕ ದೊಡ್ಡ ಮಟ್ಟದ ಆರ್ಥಿಕ ಹೊಡೆತವನ್ನು ನೀಡಿದೆ.
ಈಗ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆಯಾದರೂ ಆರ್ಥಿಕ ಹೊಡೆತದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಶಿಕ್ಷಣ ಸಂಸ್ಥೆಗಳ ಮೇಲೆ ಇದು ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದೇಶದ 179 ತಾಂತ್ರಿಕ ವಿದ್ಯಾಸಂಸ್ಥೆಗಳು ಮುಚ್ಚಿವೆ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಮಾಹಿತಿ ನೀಡಿದೆ.