ಕೊರೊನಾ ಸಂಕಷ್ಟದ ನಡುವೆಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸಂಪುಟ ವಿಸ್ತರಣೆ ಮಾಡಲು ಸಿದ್ದತೆ ನಡೆಸಿದ್ದು, ಆಗಸ್ಟ್ ತಿಂಗಳಿನಲ್ಲಿ ಈ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ. ಹೀಗಾಗಿ ಪಕ್ಷದ ವರಿಷ್ಟರ ಅನುಮತಿ ಪಡೆಯುವ ಸಲುವಾಗಿ ಆಗಸ್ಟ್ ಎರಡನೇ ವಾರದಲ್ಲಿ ಯಡಿಯೂರಪ್ಪನವರು ದೆಹಲಿಗೆ ತೆರಳಲಿದ್ದಾರೆಂದು ಹೇಳಲಾಗಿದೆ.
ಹಾಲಿ ಇರುವ ಸಚಿವರ ಪೈಕಿ ಕೆಲವರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡುವ ಇರಾದೆಯನ್ನು ಮುಖ್ಯಮಂತ್ರಿಗಳು ಹೊಂದಿದ್ದು, ಈ ಹಿನ್ನಲೆಯಲ್ಲಿ ಸಚಿವಾಕಾಂಕ್ಷಿಗಳು ಬಿರುಸಿನ ರಾಜಕೀಯ ಚಟುವಟಿಕೆ ನಡೆಸಿದ್ದಾರೆ. ಹಾಗೆಯೇ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿರುವ ಕೆಲ ಸಚಿವರು ದೆಹಲಿಗೆ ತೆರಳಿ ಕೇಂದ್ರ ನಾಯಕರನ್ನು ಭೇಟಿ ಮಾಡಿ ತಮ್ಮನ್ನು ಮುಂದುವರೆಸುವಂತೆ ಬೇಡಿಕೆ ಇಡುತ್ತಿದ್ದಾರೆನ್ನಲಾಗಿದೆ.
ಯಡಿಯೂರಪ್ಪನವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವುದು ಪಕ್ಕಾ ಎಂಬು ಮಾತುಗಳು ಜೇಳಿ ಬರುತ್ತಿದ್ದು, ಜೊತೆಗೆ ಉಮೇಶ್ ಕತ್ತಿ ಹಾಗೂ ಅರವಿಂದ ಲಿಂಬಾವಳಿ ಸಹ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಯಿದೆ. ಇನ್ನುಳಿದಂತೆ ಯಾರು ಸ್ಥಾನ ಕಳೆದುಕೊಳ್ಳಲಿದ್ದಾರೆ ಹಾಗೂ ಯಾರು ನೂತನ ಸಚಿವರಾಗಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.