ಕೋಲಾರ: ಕೋವಿಡ್-19 ಲಾಕ್ಡೌನ್ ಹಿನ್ನಲೆಯಲ್ಲಿ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯವನ್ನು ಕಳೆದುಕೊಂಡಿರುವ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿ ಪರಿಹಾರ ಧನವಾಗಿ 5000 ರೂ. ನೆರವು ನೀಡುವ ಸಲುವಾಗಿ ಸೇವಾಸಿಂಧು ಮೂಲಕ https://sevasindhu.karnataka.gov.in ವೆಬ್ಸೈಟ್ ಮೂಲಕ ಅರ್ಜಿಗಳನ್ನು ಅಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 15 ವರಗೆ ವಿಸ್ತರಣೆ ಮಾಡಲಾಗಿದೆ.
ಅರ್ಹ ಅಭ್ಯರ್ಥಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಬೇಕು. ಬಿಪಿಎಲ್ ಕಾರ್ಡ್ ಸಂಖ್ಯೆ ಕಡ್ಡಾಯವಾಗಿ ನಮೂದಿಸಬೇಕು. ಆಧಾರ್ ಕಾರ್ಡ್ ಪ್ರತಿ, ವಿಳಾಸ ದೃಢೀಕರಣ ಪತ್ರ, ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಸ್ವಯಂ ಘೋಷಣೆಗಳನ್ನು ಸಲ್ಲಿಸಬೇಕು. 18 ರಿಂದ 65 ವಯೋಮಾನದ ಒಳಗಿನವರು ಅರ್ಜಿ ಸಲ್ಲಿಸಬಹುದು. ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸುವ ಅವಕಾಶವಿರುತ್ತದೆ.
ಅರ್ಜಿದಾರರು ಅಗಸ, ಕ್ಷೌರಿಕ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಉದ್ಯೋಗ ಪ್ರಮಾಣ ಪತ್ರದ ಮೂಲ ಪತ್ರಿಯನ್ನು ಅಪ್ಲೋಡ್ ಮಾಡಬೇಕು. (ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ತಹಶೀಲ್ದಾರರು/ ಉಪತಹಶೀಲ್ದಾರರು/ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿಯ ಕಂದಾಯ ಅಧಿಕಾರಿ/ಕಂದಾಯ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು/ ಕಾರ್ಮಿಕ ಅಧಿಕಾರಿಗಳು/ ಕಾರ್ಮಿಕ ನಿರೀಕ್ಷರು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ/ ಕಾರ್ಯದರ್ಶಿಗಳು ದೃಢೀಕರಿಸಿದ ಉದ್ಯೋಗ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡುವುದು) ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಸೇವಾಸಿಂದು ಕೇಂದ್ರಗಳಲ್ಲಿ, ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೋಲಾರ ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.