ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದು, ಇದರಲ್ಲಿ ಪ್ರಸ್ತಾಪಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರ, ರಾಜ್ಯದಲ್ಲಿ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ.
ಮುಖ್ಯಮಂತ್ರಿ ಪಳನಿಸ್ವಾಮಿ, ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಬಳಿಕ ಈ ವಿಷಯ ತಿಳಿಸಿದ್ದು, ರಾಜ್ಯದಲ್ಲಿ ಈಗಾಗಲೇ ದ್ವಿ ಭಾಷಾ ನೀತಿ ಜಾರಿಯಲ್ಲಿದೆ. ಹೀಗಾಗಿ ಕೇಂದ್ರ ಸರ್ಕಾರದ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ ತಮಿಳುನಾಡಿನಲ್ಲಿ ಅನುಸರಿಸುತ್ತಿರುವ ದ್ವಿಭಾಷಾ ನೀತಿಯನ್ನು ಮುಂದುವರಿಸಿಕೊಂಡು ಹೋಗಲಾಗುತ್ತದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದು, ಇದರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.