ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಐಬಿಪಿಎಸ್ ಕನ್ನಡಿಗರಿಗೆ ಮತ್ತೆ ಮೋಸ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ಪ್ರೊಬೇಷನರಿ ಅಧಿಕಾರಿ ಮ್ಯಾನೇಜ್ಮೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಕನ್ನಡಿಗರಿಗೆ ಆದ್ಯತೆ ನೀಡಿಲ್ಲ ಎಂಬ ದೂರು ಕೇಳಿಬಂದಿದೆ. ಕಳೆದ ವರ್ಷ ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆ ನಡೆದ ಸಂದರ್ಭದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ರಾಜ್ಯದಲ್ಲಿರುವ ರಾಷ್ಟ್ರೀಕೃತ ಬ್ಯಾಂಕುಗಳ ಹುದ್ದೆಗಳು ಕನ್ನಡಿಗರಿಗೆ ಸಿಗುವಂತಾಗಲು, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ, ಸಚಿವರು, ರಾಜ್ಯದ ಸಂಸದರು, ಸಾಹಿತಿಗಳು, ಕನ್ನಡಪರ ಸಂಘಟನೆಗಳ ಹೋರಾಟಗಾರರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಚಳವಳಿ ನಡೆಸಲಾಗಿತ್ತು.
ಇತ್ತೀಚೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಪ್ರಕ್ರಿಯೆಯಲ್ಲಿ ರಾಜ್ಯದಲ್ಲಿನ ಹುದ್ದೆಗಳು ಕನ್ನಡಿಗರಿಗೆ ಸಿಗುವಂತಾಗಲು ಕ್ರಮ ಕೈಗೊಂಡಿತ್ತು. ಆದರೆ, ಸ್ವಾಯುತ್ತ ಸಂಸ್ಥೆಯಾಗಿರುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಕನ್ನಡಿಗರಿಗೆ ಆದ್ಯತೆ ನೀಡಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 1167 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು 12 ಜಿಲ್ಲಾಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ವಿವರಗಳಿಗಾಗಿ www.ibps.in ಸಂಪರ್ಕಿಸಬಹುದಾಗಿದೆ.