ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮಸೀದಿಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲು ನನಗೆ ಆಹ್ವಾನ ನೀಡುತ್ತಾರೆ ಎಂದು ಅನಿಸುವುದಿಲ್ಲ. ಈ ವಿಚಾರದಲ್ಲಿ ನನಗೆ ಯಾವುದೇ ಗೊಂದಲವಿಲ್ಲ. ನಾನು ಮುಖ್ಯಮಂತ್ರಿಯಾಗಿ ತಾರತಮ್ಯ ಮಾಡಲಾರೆ. ಆದರೆ ಹಿಂದೂವಾಗಿ ಮಸೀದಿ ಕಾರ್ಯಕ್ರಮಕ್ಕೆ ಹೋಗಲಾರೆ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ನಡೆಯುವ ದೀಪೋತ್ಸವ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಯಾವುದೇ ಧರ್ಮದ ಆಚರಣೆಯನ್ನು ಆಚರಿಸುವ ಹಕ್ಕು ನಮಗಿದೆ ಎಂದು ಮುಸ್ಲಿಮರು ಹೇಳಿದ್ದಾರೆ. ರಾಮಮಂದಿರ ಶಿಲಾನ್ಯಾಸಕ್ಕೆ ಇಕ್ಬಾಲ್ ಅನ್ಸಾರಿ ಅವರನ್ನು ಸ್ವಾಗತಿಸಿದ್ದು, ಸಂತಸ ತಂದಿದೆ ಎಂದು ತಿಳಿಸಿದ್ದಾರೆ.
ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿಯಾಗಿ ಇಂತಹ ಹೇಳಿಕೆ ನೀಡಿರುವ ಅವರು ಕ್ಷಮೆಯಾಚಿಸಬೇಕು ಎಂದು ಸಮಾಜವಾದಿ ಪಕ್ಷದ ವಕ್ತಾರ ಪವನ್ ಪಾಂಡೆ ಒತ್ತಾಯಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಹಿಂದೂ ಸಮುದಾಯಕ್ಕೆ ಮಾತ್ರ ಸೇರಿದವರಲ್ಲ. ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಘನತೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.