alex Certify ಮನೆ ಹೊಂದುವ ಕನಸು ಕಂಡು ನಿವೇಶನದ ನಿರೀಕ್ಷೆಯಲ್ಲಿದ್ದ ಬಡವರಿಗೆ ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಹೊಂದುವ ಕನಸು ಕಂಡು ನಿವೇಶನದ ನಿರೀಕ್ಷೆಯಲ್ಲಿದ್ದ ಬಡವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ದಾವಣಗೆರೆ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿರುವ ಸರ್ಕಾರಿ ಜಮೀನು ಗುರುತಿಸಿ ಬಡವರಿಗೆ ನಿವೇಶನ ನೀಡುವ ಕುರಿತು ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.

ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ಒತ್ತಾಯದ ಮೇರೆಗೆ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಜಮೀನು ಗುರುತಿಸಿ ಬಡವರಿಗೆ ನಿವೇಶನ ವಸತಿ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರೈತರಿಗೆ ಯೂರಿಯಾ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿದೆ. ಹಾಗೂ ಯೂರಿಯಾ ಜೊತೆಗೆ ಇತರೆ ರಸಗೊಬ್ಬರ ಕೊಳ್ಳುವಂತೆ ರೈತರಿಗೆ ಡೀಲರ್‍ಗಳು ಒತ್ತಾಯ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ರೈತರಿಗೆ ಯಾವ ರಸಗೊಬ್ಬರ ಬೇಕಾಗಿರುವುದೋ ಅದನ್ನು ಮಾತ್ರ ವಿತರಿಸಬೇಕು. ಬಲವಂತವಾಗಿ ಬೇರೆ ರಸಗೊಬ್ಬರ ತೆಗೆದುಕೊಳ್ಳಿ ಎಂದು ಒತ್ತಡ ಹೇರಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ದಾಖಲಿಸಿಕೊಳ್ಳದಿರುವ ಬಗ್ಗೆ ಹಾಗೂ ಅಲ್ಲಿ ದಾಖಲಾಗಿರುವ ರೋಗಿಗಳ ಚಿಕಿತ್ಸೆ ಕುರಿತು ಡಿಎಚ್‍ಓ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪರಿಶೀಲಿಸಬೇಕು. ಇದರ ಜೊತೆಗೆ ರೋಗಿಗಳ ಚಿಕಿತ್ಸೆ ಕುರಿತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಮತ್ತು ಬೆಸ್ಕಾಂ ಇಲಾಖೆಯ ಅಧಿಕಾರಿ ಸೇರಿದಂತೆ ಜಲಸಂಪನ್ಮೂಲ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮೆಡಿಕಲ್ ಶಾಪ್‍ಗಳಲ್ಲಿ ಮಾತ್ರೆಗಳನ್ನು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಈ ಕುರಿತು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾವಿನ ಪ್ರಮಾಣ ತಗ್ಗಿಸಲು ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಲು ಮುಂದಾಗಬೇಕಿದೆ ಎಂದರು.

ನಮ್ಮ ಸರ್ಕಾರ ರೈತರ ಪರವಾಗಿದೆ. ಕೊರೊನಾ ಸಂದರ್ಭದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಲು ನಾವು ಬಿಡುವುದಿಲ್ಲ. ಮುಂದಿನ ಸಭೆಯೊಳಗೆ ಸರ್ಕಾರದ ಎಲ್ಲಾ ಯೋಜನೆಗಳನ್ನು ರೈತರಿಗೆ ತಲಪಿಸಬೇಕು. ರೈತರಿಗೆ ತಲುಪಿಸಿದ ಯೋಜನೆಗಳನ್ನು ಫಲಾನುಭವಿಗಳ ಹೆಸರಿನೊಂದಿಗೆ ಎಲ್ಲಾ ಅಂಕಿ ಅಂಶಗಳ ವರದಿಯನ್ನು ಸಭೆಯಲ್ಲಿ ಒಪ್ಪಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ನೇರ ಹೊಣೆಯಾಗಲಿದ್ದು, ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಹಳ್ಳಿಗಳಲ್ಲಿ ಪಡಿತರದಾರರ ಸಂಖ್ಯೆ ಹೆಚ್ಚಿದ್ದಲ್ಲಿ, ಎರಡು ವಿಭಾಗದಲ್ಲಿ ಪಟ್ಟಿ ತಯಾರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಪ್ರತಿಯೊಬ್ಬರಿಗೂ ಪಡಿತರ ರೇಷನ್ ನೀಡಬೇಕು. ಯಾರೂ ಕೂಡ ಪಡಿತರದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ರಾಜ್ಯ ಪ.ಪಂ ವಾಲ್ಮೀಕಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಶಾಸಕರಾದ ರವೀಂದ್ರನಾಥ್, ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಜಿ.ಪಂ. ಉಪಾಧ್ಯಕ್ಷೆ ಸಾಕಮ್ಮ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ ಹಾಜರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...