ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 13 ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 1285 ಜನ ಬಲಿಯಾಗಿದ್ದರೆ, ರಾಜಧಾನಿ ಬೆಂಗಳೂರಿನಲ್ಲಿ 399 ಜನರು ಮಹಾಮಾರಿಗೆ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಿಬಿಎಂಪಿ 2 ಸೂತ್ರಗಳನ್ನು ಹೆಣೆಯಲು ಮುಂದಾಗಿದೆ.
ಈ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದ್ದು, ಕನ್ವೆಷನಲ್ ಅಪ್ರೋಚ್, ಅಗ್ರೆಸ್ಸಿವ್ ಅಪ್ರೋಚ್ ಎಂಬ ಎರಡು ಸೂತ್ರದ ಮೂಲಕ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಸೋಂಕಿನ ಗುಣ ಲಕ್ಷಣ ಕಂಡುಬಂದವರು ತಕ್ಷಣ ಕೋವಿಡ್ ಟೆಸ್ಟ್ ಗೆ ಒಳಗಾಗುವುದು, ಎರಡನೇ ಹಂತವಾದ ಅಗ್ರೆಸ್ಸಿವ್ ಅಪ್ರೋಚ್ ನಲ್ಲಿ ಸೋಂಕಿತರ ಮನೆಯ ಸುತ್ತಮುತ್ತಲಿನ ಜನರ ಕೋವಿಡ್ ಟೆಸ್ಟ್ ಮಾಡುವುದು.
ಇದರ ಜತೆಗೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೂ ಕೊರೊನಾ ಟೆಸ್ಟ್ ಮಾಡಿಸುವುದು. ಈ ಕೆಲಸಗಳಿಗಾಗಿ ಎನ್.ಜಿ.ಒ. ಹಾಗೂ ಸ್ವಯಂ ಸೇವಕರನ್ನು ಬಳಸಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.