ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು, ಶಿಕ್ಷಕರಿಗೆ ವಿಶೇಷ ಕ್ರಿಯಾ ಯೋಜನೆ ಸಿದ್ಧಪಡಿಸಲು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತಾಗಿ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಗೋವಿಂದ ಕಾರಜೋಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಉನ್ನತ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣ ಸಿಗುವಂತೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಹೇಳಿದ್ದಾರೆ.
ಎಸ್ಸಿಎಸ್ಟಿ ಮತ್ತು ಒಬಿಸಿ ವರ್ಗದ ವಿದ್ಯಾರ್ಥಿಗಳು ಹೆಚ್ಚಾಗಿ ಸರ್ಕಾರಿ ಶಾಲೆಗಳನ್ನು ಅವಲಂಬಿಸಿದ್ದು ಇಂತಹ ಶಾಲೆಗಳಲ್ಲಿ ಗುಣಾತ್ಮಕ ಮತ್ತು ಪರಿಣಾಮಕಾರಿ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿಯಡಿ ಹೆಚ್ಚಿನ ಅವಕಾಶಗಳಿವೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪ್ರಾದೇಶಿಕ ಅಸಮಾನತೆ ನಿವಾರಣೆಗೆ ವಿಶೇಷ ಶೈಕ್ಷಣಿಕ ವಲಯ ರಚಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಶಿಕ್ಷಕರ ವೃತ್ತಿಪರ ಪ್ರಗತಿಗೆ ವಿಶೇಷ ಯೋಜನೆ ರೂಪಿಸುವಂತೆ ಸಚಿವರು ತಿಳಿಸಿದ್ದಾರೆ.