ಬೀದರ್ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ಯೋಜನೆ ರೂಪಿಸಲಾಗಿದೆ. ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುವುದು.
ಕಳೆದ ಆರು ವರ್ಷಗಳಿಂದ ಬೀದರ್ ಜಿಲ್ಲಾಡಳಿತ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿಜ್ಞಾನ ಕಾಲೇಜುಗಳಲ್ಲಿ ಪ್ರವೇಶ ಅವಕಾಶ ಕಲ್ಪಿಸುತ್ತಿದೆ. ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾಡಳಿತದ ಯೋಜನೆಯಡಿ ಸುಮಾರು 2000 ವಿದ್ಯಾರ್ಥಿಗಳು ಉಚಿತ ಪ್ರವೇಶ ಪಡೆದುಕೊಂಡಿದ್ದಾರೆ. ಅವರಲ್ಲಿ ಕೆಲವರು ಇಂಜಿನಿಯರಿಂಗ್, ವೈದ್ಯಕೀಯ ಸೇರಿ ಉನ್ನತ ಶಿಕ್ಷಣ ಪೂರ್ಣಗೊಳಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ 90 ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಕಾಲೇಜುಗಳು ಜಿಲ್ಲಾಡಳಿತದ ಅಭಿಯಾನಕ್ಕೆ ಜೊತೆಯಾಗಿವೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದರೂ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಆರ್ಥಿಕ ಸಮಸ್ಯೆ ಎದುರಾಗಿತ್ತು.
ಸಣ್ಣ ಪುಟ್ಟ ವ್ಯಾಪಾರಿಗಳು, ಕಾರ್ಮಿಕರು, ಬಡವರ ಮಕ್ಕಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಮಕ್ಕಳನ್ನು ಓದಿಸಲು ಸಮಸ್ಯೆಯಾಗಿದ್ದು ಇದನ್ನು ಮನಗಂಡ ಜಿಲ್ಲಾಡಳಿತ ಯೋಜನೆ ರೂಪಿಸಿದ್ದು ಅತಿ ಹೆಚ್ಚು ಅಂಕಗಳಿಂದ ಎಸ್ಎಸ್ಎಲ್ಸಿ ಪಾಸಾದ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವ ಬಡ ಮಕ್ಕಳಿಗೆ ಪ್ರವೇಶ ನೀಡಲಾಗುತ್ತದೆ. 2014ರಲ್ಲಿ ಜಿಲ್ಲಾಧಿಕಾರಿಯಾಗಿದ್ದ ಪಿ.ಸಿ. ಜಾಫರ್ ಆರಂಭಿಸಿದ ಈ ಮಹತ್ವದ ಅಭಿಯಾನ ಮುಂದುವರೆದುಕೊಂಡು ಬಂದಿದ್ದು, ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.