ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದತೆ ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದ ನ್ಯಾಯಾಲಯ ಇದೀಗ ನಟಿ ಸಂಜನಾ ಗಲ್ರಾಣಿ ಅವರನ್ನು ಸೆ.16ರವರೆಗೆ ಸಿಸಿಬಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಆರೋಪಿಗಳಾದ ನಟಿ ರಾಗಿಣಿ, ಸಂಜನಾ, ರಾಹುಲ್, ಪ್ರಶಾಂತ್ ರಾಂಕ, ಲೂಮ್ ಪೆಪ್ಪರ್, ನಯಾಜ್ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಎಲ್ಲಾ ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು.
ಈ ವೇಳೆ ನಟಿ ಸಂಜನಾ ಅವರನ್ನು ಇನ್ನಷ್ಟು ದಿನಗಳ ಕಾಲ ವಿಚಾರಣೆ ನಡೆಸುವ ಅಗತ್ಯವಿದ್ದು, 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಒಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಜನಾ ಪರ ವಕೀಲರು ಸಂಜನಾ ವಿರುದ್ಧ ಯಾವುದೇ ಸಾಕ್ಷ್ಯಗಳೂ ಸಿಸಿಬಿಗೆ ಲಭ್ಯವಾಗಿಲ್ಲ. ಅನಗತ್ಯವಾಗಿ ನಟಿಯ ವಿರುದ್ಧ ಆರೋಪ ಮಾಡಲಾಗುತ್ತಿದೆ. ಸಿಸಿಬಿ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಎರಡೂ ಕಡೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ.