ಚನ್ನೈ: ತೀವ್ರ ಅನಾರೋಗ್ಯದಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾಗಿರುವ ಸ್ವರ ಮಾಂತ್ರಿಕ, ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್.ಪಿ.ಬಿ. ಮನೆಗೆ ಸ್ಥಳಾಂತರಿಸಲಾಗಿದೆ. ಗಾಯಕನ ಅಂತ್ಯಕ್ರಿಯೆ ನಾಳೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಆ.5ರಂದು ಕೊರೊನಾ ಸೋಂಕಿನಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದರು. ಈ ಮಧ್ಯೆ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಸೆ.4ರಂದು ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿತ್ತು ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಅನುಮತಿ ನೀಡಿದರೆ ಎಸ್.ಪಿ.ಬಿ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಲಾಗುವುದು. ಇಂದು ಸಂಜೆಯಿಂದ ರಾತ್ರಿಯಿಡಿ ತಮಿಳುನಾಡಿನ ಕೋಡಂಬಾಕಂನಲ್ಲಿರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು.
ಒಂದು ವೇಳೆ ಸರ್ಕಾರ ಒಪ್ಪದಿದರೆ ನಾಳೆ ಬೆಳಿಗ್ಗೆಯೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆಯನ್ನು ಅವರ ರೆಡ್ ಹಿಲ್ಸ್ ಫಾರ್ಮ್ ಹೌಸ್ ನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.