ಬೆಂಗಳೂರು: ಹಳೆ ಪಿಂಚಣಿ ಪದ್ಧತಿ ಮರು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಪತ್ರ ಬರೆದು ಮನವಿ ಮಾಡಿದ್ದಾರೆ.
ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ 2.28 ಲಕ್ಷ ಸರ್ಕಾರಿ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕೆಂದು ಕೋರಿದ್ದಾರೆ.
ರಾಜ್ಯದಲ್ಲಿ ಏಪ್ರಿಲ್ 1, 2006ರಿಂದ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಇದನ್ನು ರದ್ದುಪಡಿಸಿ ಎಲ್ಲಾ ಸರ್ಕಾರಿ ನೌಕರರಿಗೆ ಏಕರೂಪದ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.
ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಎನ್.ಪಿ.ಎಸ್. ನೌಕರರು ಹಲವು ಹೋರಾಟಗಳನ್ನು ನಡೆಸುತ್ತಿದ್ದಾರೆ. ಈ ಹಿಂದೆ ಬೆಳಗಾವಿಯಲ್ಲಿ ನೌಕರರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಲಾಗಿತ್ತು. ಈ ಬಗ್ಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಸಿಎಂಗೆ ಈಶ್ವರಪ್ಪ ಪತ್ರ ಬರೆದಿದ್ದಾರೆ ಎನ್ನಲಾಗಿದೆ.