ಹಾಸನ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಖಂಡಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ರಾಮನಗರ, ಹಾಸನ, ಹುಬ್ಬಳ್ಳಿ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹಲವೆಡೆ ಟೈಯರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಡಿ.ಕೆ.ಶಿ ನಿವಾಸದ ಮೇಲೆ ಸಿಬಿಐ ದಾಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸೇಡಿನ ರಾಜಕಾರಣಕ್ಕೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.
ಹಾಸನದ ಬಿ.ಎಂ.ರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ಕಾರ್ಯಕರ್ತರು ಹಾಗೂ ಡಿ.ಕೆ.ಶಿವಕುಮಾರ್ ಬೆಂಬಲಿಗರು, ರಸ್ತೆ ಮಧ್ಯೆಯೇ ಕುಳಿತು ಧರಣಿ ನಡೆಸಿದರು. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿ ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಕನಕಪುರದ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿರುವ ಕೈ ಕಾರ್ಯಕರ್ತರು, ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿದ್ದಾರೆ