ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕರಾಗಿದ್ದ ಮುನಿರತ್ನ ಸೇರಿದಂತೆ ಕೆಲ ಸಚಿವ, ಶಾಸಕರುಗಳು ರಾಜೀನಾಮೆ ನೀಡಿದ ಕಾರಣಕ್ಕೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬಂದಿತ್ತು.
ರಾಜೀನಾಮೆ ನೀಡಿದ ಶಾಸಕರೆಲ್ಲರೂ ಬಿಜೆಪಿ ಸೇರ್ಪಡೆಗೊಂಡಿದ್ದು, ಉಪ ಚುನಾವಣೆಯಲ್ಲಿ ಬಹುತೇಕ ಎಲ್ಲರಿಗೂ ಟಿಕೆಟ್ ನೀಡಲಾಗಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ನಡೆದಿರಲಿಲ್ಲ.
ಇದೀಗ ಈ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುನಿರತ್ನ ಅವರಿಗೆ ತಮಗೆಲ್ಲಿ ಟಿಕೆಟ್ ತಪ್ಪುವುದು ಎಂಬ ಆತಂಕ ಕಾಡುತ್ತಿದೆ ಎನ್ನಲಾಗಿದೆ. ಈ ಕ್ಷೇತ್ರದಿಂದ ಮುನಿರತ್ನ ಹಾಗೂ ತುಳಸಿ ಮುನಿರಾಜುಗೌಡ ಅವರ ಹೆಸರನ್ನು ಕೇಂದ್ರ ಸಮಿತಿಗೆ ಶಿಫಾರಸು ಮಾಡಿರುವುದೇ ಇದಕ್ಕೆ ಕಾರಣ.
ಈ ಹಿನ್ನೆಲೆಯಲ್ಲಿ ಒಂದೊಮ್ಮೆ ತಮಗೆ ಬಿಜೆಪಿ ಟಿಕೆಟ್ ಕೈತಪ್ಪಿದರೆ ಜೆಡಿಎಸ್ ಸೇರ್ಪಡೆಗೊಂಡು ಉಪ ಚುನಾವಣೆಗೆ ಕಣಕ್ಕಿಳಿಯುವ ಕುರಿತು ಮುನಿರತ್ನ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಜೆಡಿಎಸ್ ಆರ್.ಆರ್. ನಗರ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿ ಘೋಷಣೆ ಮಾಡುವ ಗೋಜಿಗೆ ಹೋಗಿಲ್ಲ. ಇನ್ನೆರಡು ದಿನಗಳ ಒಳಗಾಗಿ ಈ ಕುರಿತ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.