ಆರ್ಥಿಕವಾಗಿ ಸದೃಢವಾಗಿದ್ದರೂ ಸಹ ಬಿಪಿಎಲ್ ಕಾರ್ಡ್ ಪಡೆದುಕೊಂಡು ಉಚಿತ ಪಡಿತರ ಪಡೆಯುತ್ತಿದ್ದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಒಟ್ಟು 94 ಸಾವಿರಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದು ಪಡಿಸಲಾಗಿದ್ದು, ಅವರುಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಅನರ್ಹರು ಅವುಗಳನ್ನು ಹಿಂದಿರುಗಿಸುವಂತೆ ಸಾಕಷ್ಟು ಬಾರಿ ಕಾಲಾವಕಾಶ ನೀಡಿದ್ದರೂ ಸಹ ಇದಕ್ಕೆ ಸೂಕ್ತ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ. ಹೀಗಾಗಿ ಬಿಪಿಎಲ್ ಕಾರ್ಡ್ ಪಡೆದಿರುವ ಅನರ್ಹರ ಕುರಿತು ಮಾಹಿತಿ ನೀಡುವ ಸಾರ್ವಜನಿಕರಿಗೆ ಬಹುಮಾನ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿತ್ತು.
ಇದೀಗ ಕಳೆದ 15 ತಿಂಗಳ ಅವಧಿಯಲ್ಲಿ ರಾಜ್ಯದಾದ್ಯಂತ ಅನರ್ಹರ ಒಟ್ಟು 94,885 ಎಎವೈ ಹಾಗೂ ಬಿಪಿಎಲ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ ಎನ್ನಲಾಗಿದ್ದು, ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು 6 ಕೋಟಿ ರೂಪಾಯಿಗೂ ಅಧಿಕ ಹಣ ಉಳಿತಾಯವಾಗುತ್ತಿದೆ ಎನ್ನಲಾಗಿದೆ.