ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.
ಮಾಸ್ಕ್ ಧರಿಸದಿದ್ದವರಿಗೆ 500 ರೂ. ಗಳಿಂದ 1000 ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತಿದ್ದು, ಇಷ್ಟಾದರೂ ಸಹ ಸಾರ್ವಜನಿಕರು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಇದರ ಜೊತೆಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವ ಕುರಿತೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಕೊರೊನಾ ಪರೀಕ್ಷೆಯನ್ನು ಕಡ್ಡಾಯ ಮಾಡಲು ಮುಂದಾಗಿದೆ ಎನ್ನಲಾಗಿದ್ದು, ಇದಕ್ಕೆ ನಿರಾಕರಿಸಿದರೆ ಐವತ್ತು ಸಾವಿರ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ.
ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರು, ರೋಗಲಕ್ಷಣ ಇರುವವರು ಕೊರೊನಾ ಪರೀಕ್ಷೆಗೆ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.