ಭಾನುವಾರದಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಪೃಥ್ವಿ ಶಾ ಕೇವಲ 4ರನ್ ಗಳಿಸಿ ಟ್ರೆಂಟ್ ಬೌಲ್ಟ್ ಬೌಲಿಂಗ್‌ನಲ್ಲಿ ಔಟಾದರು. ಬಳಿಕ ಬಂದ ಅಜಿಂಕ್ಯ ರಹಾನೆ 15ರನ್ ಗಳಿಸಿದ್ದು, ಕೃನಾಲ್ ಪಾಂಡ್ಯ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು.
ನಂತರ ನಾಯಕ ಶ್ರೇಯಸ್ ಅಯ್ಯರ್ 42ರನ್ ಗಳಿಸುವ ಮೂಲಕ ಔಟಾದರು. ಆರಂಭಿಕ ಆಟಗಾರ ಶಿಖರ್ ಧವನ್ 52 ಎಸೆತಗಳಲ್ಲಿ 69 ರನ್ ಗಳಿಸುವ ಮೂಲಕ ಅಜೇಯರಾಗಿ ಉಳಿದರು. ಒಟ್ಟಾರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ವಿಕೆಟ್ ನಷ್ಟಕ್ಕೆ 162ರನ್ ಗಳ ಮೊತ್ತ ದಾಖಲಿಸಿತು.
ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆರಂಭಿಕ ಆಟಗಾರ ನಾಯಕ ರೋಹಿತ್ ಶರ್ಮ 5ರನ್ ಗಳಿಸಿ ಅಕ್ಸರ್ ಪಟೇಲ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ನಂತರ ಕ್ವಿಂಟನ್ ಡಿ ಕಾಕ್ 36 ಎಸೆತಗಳಲ್ಲಿ 53 ರನ್ ಗಳಿಸಿದ್ದು ರವಿಚಂದ್ರನ್ ಅಶ್ವಿನ್ ಬೌಲಿಂಗ್‌ನಲ್ಲಿ ಔಟಾದರು.
ಸೂರ್ಯ ಕುಮಾರ್ ಯಾದವ್ 32 ಎಸೆತಗಳಲ್ಲಿ 53 ರನ್ ಗಳಿಸಿದ್ದು ರಬಾಡ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಹಾರ್ದಿಕ್ ಪಾಂಡ್ಯ ಶೂನ್ಯಕ್ಕೆ ಔಟಾದರು. ಇಶಾನ್ ಕಿಶನ್ ಕೂಡ 28ರನ್ ಗಳಿಸಿದ್ದು ಔಟಾದರು. ಕೊನೆ ಹಂತದಲ್ಲಿ ಕೈರನ್ ಪೊಲಾರ್ಡ್ ಹಾಗೂ ಕೃನಾಲ್ ಪಾಂಡ್ಯ ಗೆಲುವಿಗಾಗಿ ಹೋರಾಡಿದರು ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ಗಳ ಜಯ ಸಾಧಿಸಿತು.