ಬೆಂಗಳೂರು: ವರುಣನ ಆರ್ಭಟಕ್ಕೆ ತತ್ತರಿಸಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವೈಮಾನಿಕ ಸಮಿಕ್ಷೆ ನಡೆಸಲು ನಿರ್ಧರಿಸಿದ್ದಾರೆ.
ಭಾರೀ ಮಳೆ ಹಾಗೂ ಪ್ರವಾಹ ಪರಿಸ್ಥಿತಿಗೆ ಸಿಲುಕಿ ನಲುಗಿರುವ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಅಕ್ಟೋಬರ್ 21ರಂದು ವೈಮಾನಿಕ ಸಮೀಕ್ಷೆ ನಡೆಸುತ್ತಿರುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಭೀಮಾ ಹಾಗೂ ಕೃಷ್ಣಾ ನದಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಜನರ ಸಂಕಷ್ಟ ಆಲಿಸುವ ನಿಟ್ಟಿನಲ್ಲಿ ಹಾಗೂ ಪರಿಸ್ಥಿತಿ ಅವಲೋಕನಕ್ಕಾಗಿ ಬುಧವಾರ ಖುದ್ದು ವೈಮಾನಿಕ ಸಮೀಕ್ಷೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.