ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಪಂತ್, ಬೆದರಿಕೆ ಪ್ರಕರಣದ ತನಿಖೆಗಾಗಿ ಈಗಾಗಲೇ ಮೂರು ವಿಶೇಷ ತಂಡ ರಚನೆ ಮಾಡಲಾಗಿದೆ. ಇದೀಗ ಪ್ರಕರಣವನ್ನು ಸಿಸಿಬಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕಿತರಾದ ಶಿವಪ್ರಕಾಶ್ ಹಾಗೂ ರಾಜಶೇಖರ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಕೇಂದ್ರ ವಿಭಾಗದ ಪೊಲೀಸರು ಆರೋಪಿಗಳ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ ಎಂದು ಹೇಳಿದರು.