ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಿದ್ದಾರೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕರ ಮನೆಗೆ ಬೆಂಕಿ ಪ್ರಕರಣದಲ್ಲಿ ಸಂಪತ್ ರಾಜ್ ಹೆಸರು ಕೇಳಿಬಂದಿತ್ತಲ್ಲದೇ ಪ್ರಕರಣದ 51 ನೇ ಆರೋಪಿ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿತ್ತು. ಸಂಪತ್ ರಾಜ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. 5 ದಿನಗಳ ಹಿಂದೆ ಯಾರಿಗೂ ತಿಳಿಯದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಪತ್ ರಾಜ್ ಆಸ್ಪತ್ರೆಯಿದ ಡಿಸ್ಚಾರ್ಜ್ ಆಗುವ ವೇಳೆ ಮಾಹಿತಿ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗಳಿಗೆ ಸಿಸಿಬಿ ಅಧಿಕಾರಿಗಳು ಸೂಚಿಸಿದ್ದರು. ಆದರೆ ಯಾರಿಗೂ ತಿಳಿಯದಂತೆಯೇ ಡಿಸ್ಚಾರ್ಜ್ ಮಾಡಿಸಿಕೊಂಡಿರುವ ಸಂಪತ್ ರಾಜ್ ಎಸ್ಕೇಪ್ ಆಗಿದ್ದಾರೆ.
ಇದೀಗ ಮಾಜಿ ಮೇಯರ್ ಸಂಪತ್ ರಾಜ್ ಗಾಗಿ ಸಿಸಿಬಿ ಹಾಗೂ ಎನ್ ಸಿಬಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.