ಬೆಂಗಳೂರು: ಉಪ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಉಪ ಚುನಾವಣೆ ಮುಗಿದ ನಂತರ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ವರಿಷ್ಠರೊಂದಿಗೆ ಉಪ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸಂಪುಟ ವಿಸ್ತರಣೆಗೆ ಕ್ರಮಕೈಗೊಳ್ಳಲಾಗಿದ್ದು ಇದರ ಬೆನ್ನಲ್ಲೇ ಆಕಾಂಕ್ಷಿಗಳಲ್ಲಿ ಚಟುವಟಿಕೆ ಗರಿಗೆದರಿದೆ. ಸೆಪ್ಟೆಂಬರ್ ನಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಆದರೆ, ವಿಧಾನಸಭೆ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ಸಂಪುಟ ವಿಸ್ತರಣೆ ಮಾಡಲು ಸಿಎಂ ನಿರ್ಧರಿಸಿದ್ದಾರೆ. ಈ ಬಾರಿ ಸಂಪುಟ ವಿಸ್ತರಣೆಯೊಂದಿಗೆ ಪುನಾರಚನೆಯಾಗುವ ಸಾಧ್ಯತೆ ಕೂಡ ಇದೆ. ಹಾಲಿ ಇರುವ ಆರರಿಂದ ಎಂಟು ಮಂದಿ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದು ಎಂದು ಹೇಳಲಾಗಿದೆ.