ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೂರು ತಿಂಗಳ ನಂತರ ಮೌನ ಮುರಿದಿದ್ದಾರೆ.
ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಸಂದರ್ಶನವೊಂದರಲ್ಲಿ ಅವರು ಸುಶಾಂತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಬಿಐ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ನಡೆಸುತ್ತಿದೆ. ತನಿಖೆ ಪೂರ್ಣಗೊಂಡ ನಂತರ ಕಾರಣ ತಿಳಿಯಲಿದೆ ಎಂದು ಹೇಳಿದ್ದಾರೆ.
ಜೂನ್ 14 ರಂದು ಮುಂಬೈನ ತನ್ನ ಅಪಾರ್ಟ್ ಮೆಂಟ್ ನಲ್ಲಿ ಸುಶಾಂತ್ ಸಿಂಗ್ ಶವವಾಗಿ ಪತ್ತೆಯಾಗಿದ್ದರು. ಮುಂಬೈ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಸುಶಾಂತ್ ಸಿಂಗ್ ಸೀಲಿಂಗ್ ಫ್ಯಾನಿಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿತ್ತು. ಬಳಿಕ ಸಿಬಿಐ ಮತ್ತು ಫೆಡರಲ್ ತನಿಖಾ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಪ್ರಕರಣದ ತನಿಖೆ ನಡೆಸಿವೆ. ವಿವಿಧ ಆಯಾಮಗಳಿಂದ ತನಿಖೆ ಮುಂದುವರೆದಿದೆ.
ಆಗಸ್ಟ್ ನಲ್ಲಿ ಬಿಹಾರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ ನಂತರ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಲಾಗಿದೆ. ಇದನ್ನು ಸುಪ್ರೀಂಕೋರ್ಟ್ ಕೂಡ ಅಂಗೀಕರಿಸಿದೆ. ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಸುಶಾಂತ್ ಅವರ ತಂದೆಯ ಬಗ್ಗೆ ಸಹಾನುಭೂತಿ ಹೊಂದಿದೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪ ಮಾಡುವಂತಹದು ಏನೂ ಇಲ್ಲ. ಸುಶಾಂತ್ ಅವರ ತಂದೆ ರಿಯಾ ಚಕ್ರವರ್ತಿ ಮತ್ತು ಇತರ ಆರು ಮಂದಿ ವಿರುದ್ಧ ಆರೋಪ ಮಾಡಿದ್ದಾರೆ. ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತ ವಿಚಾರಣೆ ನಡೆಸಿ ತನಿಖೆ ಪೂರ್ಣಗೊಳಿಸುವ ಭರವಸೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.