ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ನಾಳೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ. ಡಿಸೆಂಬರ್ 2ನೇ ವಾರದಿಂದ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಈಗಾಗಲೇ ಸರಣಿ ಸಭೆಗಳನ್ನು ನಡೆಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಖಾಸಗಿ ಶಾಲೆ, ಬಿಬಿಎಂಪಿ, ಎಸ್ ಡಿಎಂಸಿ ಅಧ್ಯಕ್ಷರು, ಪೋಷಕರು ಹೀಗೆ ಎಲ್ಲರೊಂದಿಗೂ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿ ಶಾಲೆ ಆರಂಭದ ಬಗ್ಗೆ ವರದಿ ಸಿದ್ಧಪಡಿಸಿದ್ದಾರೆ. ಆರಂಭದಲ್ಲಿ ಪ್ರೌಢ ಶಿಕ್ಷಣ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಮ್ಮತಿ ದೊರೆತಿದೆ ಎನ್ನಲಾಗಿದೆ.
9ರಿಂದ 12ನೇ ತರಗತಿವರೆಗೂ ಶಾಲೆ-ಕಾಲೇಜು ತೆರೆಯಲು ಸಮಾಜ ಕಲ್ಯಾಣ ಇಲಾಖೆ ಅನುಮತಿ ನೀಡಿದ್ದು, ತನ್ನ ವ್ಯಾಪ್ತಿಯ ಹಾಸ್ಟೆಲ್ ತೆರೆಯಲು ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ. ಶಾಲೆಗಳನ್ನು ಆರಂಭ ಮಾಡುವ ಬಗ್ಗೆ ಆರೋಗ್ಯ ಇಲಾಖೆ ಹಲವು ಸಲಹೆ-ಸೂಚನೆಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ನಾಳೆ ಶಿಕ್ಷಣ ಇಲಾಖೆ ಶಾಲೆ ಆರಂಭದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿದೆ ಎನ್ನಲಾಗುತ್ತಿದೆ.