ಬೆಂಗಳೂರು: ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆ ಗರಿಗೆದರಿದೆ.
ಸಚಿವ ಸ್ಥಾನಾಕಾಂಕ್ಷಿಗಳು ಸಭೆ ನಡೆಸಿ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರತೊಡಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಆಕಾಂಕ್ಷಿಗಳ ದಂಡೇ ಆಗಮಿಸಿ ಚರ್ಚೆ ನಡೆಸಿದೆ. ಬಿಜೆಪಿ ಶಾಸಕರಾದ ರೇಣುಕಾಚಾರ್ಯ, ಮುರುಗೇಶ್ ನಿರಾಣಿ, ರಾಜುಗೌಡ, ಪ್ರತಾಪ್ ಗೌಡ ಪಾಟೀಲ್ ಮೊದಲಾದವರು ಸಿಎಂ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಸಿ.ಟಿ. ರವಿ ರಾಜೀನಾಮೆಯಿಂದ ತೆರವಾದ ಸ್ಥಾನ ಸೇರಿ ಸದ್ಯ ಯಡಿಯೂರಪ್ಪ ಸಂಪುಟದಲ್ಲಿ 7 ಸಚಿವ ಸ್ಥಾನಗಳು ಖಾಲಿ ಇವೆ. ಇತ್ತೀಚೆಗಷ್ಟೇ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಮುನಿರತ್ನ, ಬಿಜೆಪಿ ಸರ್ಕಾರ ರಚನೆಯಲ್ಲಿ ಸಹಕಾರ ನೀಡಿದ ಎಂಟಿಬಿ ನಾಗರಾಜ್, ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ಗ್ಯಾರಂಟಿಯಾಗಿದೆ. ಉಳಿದ 4 ಸ್ಥಾನಗಳಿಗೆ ತೀವ್ರ ಪೈಪೋಟಿ ಇದ್ದು ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ದೀಪಾವಳಿ ಬಳಿಕ ಸಿಎಂ ದೆಹಲಿಗೆ ಭೇಟಿ ನೀಡಿ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದಾದ ಬಳಿಕ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಲಿದೆ. ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ, ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಮೊದಲೇ ಸಂಪುಟ ವಿಸ್ತರಣೆ ಮಾಡಬಹುದು ಎಂದು ಹೇಳಲಾಗಿದೆ.