ಕೊರೊನಾ ಮಹಾಮಾರಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಆದರೆ ಇದನ್ನು ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಉಲ್ಲಂಘಿಸಿದ್ದು, ಕಠಿಣ ಕಾನೂನುಗಳು ಕೇವಲ ಜನಸಾಮಾನ್ಯರಿಗೆ ಮಾತ್ರವಾ ಎಂಬ ಪ್ರಶ್ನೆ ಕೇಳಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ಸ್ವಯಂಸೇವಾ ಸಂಸ್ಥೆಯೊಂದು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಜನಪ್ರತಿನಿಧಿಗಳ ವರ್ತನೆ ವಿರುದ್ಧ ಕಿಡಿಕಾರಿದೆಯಲ್ಲದೆ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದಕ್ಕೆ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಮಾನ್ಯತೆ ಪಡೆದಿರುವ ಎಲ್ಲ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಮಾಡುವಂತೆ ಅರ್ಜಿದಾರರಿಗೆ ಸೂಚಿಸಿದ್ದು, ನೋಟಿಸ್ ನೀಡಲು ಮುಂದಾಗಿದೆ. ಜೊತೆಗೆ ಈಗಾಗಲೇ ಕೋವಿಡ್ ನಿಯಮ ಉಲ್ಲಂಘಿಸಿರುವ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರ ವಿರುದ್ಧ ಈವರೆಗೆ ಏಕೆ ಕ್ರಮ ಜರುಗಿಸಿಲ್ಲ ಎಂದು ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿದೆ.