ಬೆಂಗಳೂರು: ಕೋವಿಡ್ ಕುರಿತಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಐತಿಹಾಸಿಕ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸೌಲಭ್ಯ, ಸವಲತ್ತು ಕೊಡಬಹುದು. ಲಸಿಕೆ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ಯಾವ ಮಹತ್ವದ ನಿರ್ಧಾರ ಘೋಷಿಸಲಿದ್ದಾರೆ ಎಂಬುದನ್ನು ಕಾದುನೋಡಬೇಕು ಎಂದರು.
ಪ್ರಧಾನಿ ಮೋದಿ, ಕೋವಿಡ್ ಸಂಖ್ಯೆ ಹೆಚ್ಚುತ್ತಿರುವ ಪಶ್ಚಿಮ ಬಂಗಾಳ, ಹರ್ಯಾಣ, ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ, ಕೇರಳ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕೊರೊನಾ ಸ್ಥಿತಿಗತಿ, ಲಸಿಕೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಡಿಸೆಂಬರ್ ನಲ್ಲಿ ಕೊರೊನಾ ವ್ಯಾಕ್ಸಿನ್ ಲಭ್ಯವಾಗುವ ಮಾಹಿತಿ ಬೆನ್ನಲ್ಲೇ ಈ ಸಭೆ ಮಹತ್ವ ಪಡೆದುಕೊಂಡಿದೆ.