ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನವದೆಹಲಿಗೆ ಭೇಟಿ ನೀಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರಾದರೂ ಈವರೆಗೂ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.
ಇದರ ಮಧ್ಯೆ ನಿಗಮ – ಮಂಡಳಿಗಳಿಗೆ ನೇಮಕಾತಿ ಮಾಡಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆಪ್ತರಿಗೆ ಆಯಕಟ್ಟಿನ ಹುದ್ದೆ ಕಲ್ಪಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಹಲವು ವರ್ಷಗಳಿಂದಲೂ ಪಕ್ಷಕ್ಕಾಗಿ ದುಡಿಯುತ್ತಿರುವವರ ಪಟ್ಟಿ ನೀಡಿದ್ದರೆಂದು ಹೇಳಲಾಗಿದ್ದು, ಅದರಲ್ಲಿ ಕೆಲವರಿಗೆ ಅವಕಾಶ ನೀಡಲಾಗಿದೆ.
ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ನೆರವೇರುವುದಿಲ್ಲವೆಂಬ ಮಾತುಗಳು ಕೇಳಿ ಬರುತ್ತಿದ್ದು, ಹೀಗಾಗಿ ಸಚಿವಾಕಾಂಕ್ಷಿ ಶಾಸಕರುಗಳು ಅನಿವಾರ್ಯವಾಗಿ ಕಾಯಬೇಕಾಗಿದೆ. ಸದ್ಯದಲ್ಲೇ ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿರುವುದರಿಂದ ಈ ಚುನಾವಣೆ ಬಳಿಕವೇ ಸಂಪುಟ ವಿಸ್ರರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.