ಬೆಂಗಳೂರು: ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ಸಾಗಲಿದ್ದಾರೆ.
ಸಂಪುಟ ವಿಸ್ತರಣೆ ಕಸರತ್ತು ಮುಂದುವರೆದಿದೆ. ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡುವ ಆಶಯವನ್ನು ಸಿಎಂ ಯಡಿಯೂರಪ್ಪ ಹೊಂದಿದ್ದರು. ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದವರೂ ಇದೇ ನಿರೀಕ್ಷೆಯಲ್ಲಿದ್ದರು. ಆದರೆ, ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಲಾಗಿದೆ.
ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ಪರಮಾಧಿಕಾರ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರೂ, ಪಕ್ಷದ ವರಿಷ್ಠರು ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಸದ್ಯಕ್ಕೆ ಅಧಿವೇಶನ, ಗ್ರಾಮ ಪಂಚಾಯಿತಿ ಚುನಾವಣೆ ಇರುವುದರಿಂದ ಸಂಪುಟ ಸಮಸ್ಯೆ ಬಗೆಹರಿಯದೇ ಉಳಿದಂತಾಗಿದೆ.