ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ 7 ವರ್ಷದ ಬಾಲಕಿ ಮೇಲೆ ಇಬ್ಬರು ಪುರುಷರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿ ಕೆಲವು ಗಂಟೆಗಳ ಕಾಲ ನಾಪತ್ತೆಯಾಗಿದ್ದಳು. ನಂತರದಲ್ಲಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಶುಕ್ರವಾರ ಸಂಜೆ ಬುಧಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗ್ರಾಮದ ಮನೆಯೊಂದರ ಮೇಲ್ಚಾವಣಿಯಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ, ತೀವ್ರ ರಕ್ತಸ್ರಾವದಿಂದ ಬಳಲುತ್ತಿರುವುದು ಕಂಡು ಬಂದಿದೆ. ಬಾಲೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಮತ್ತು ಸಾಮೂಹಿಕ ಅತ್ಯಾಚಾರ ಕಾಯ್ದೆಯಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಗಿರಿಜಾ ಶಂಕರ್ ತ್ರಿಪಾಠಿ ತಿಳಿಸಿದ್ದಾರೆ. ಬಾಲಕಿಯನ್ನು ಅಪಹರಿಸಿ ಹತ್ತಿರದ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.