ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ರೈತರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸುವ ಬದಲು ಬಿಕ್ಕಟ್ಟು ಪರಿಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಕಳೆದ 22 ದಿನಗಳಿಂದ ದೆಹಲಿ ಹೊರವಲಯದಲ್ಲಿ ರೈತರು ನೂತನ ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸಿದ್ದು, ಹೆದ್ದಾರಿ ಬಂದ್ ಆಗಿರುವುದರಿಂದ ರೈತರನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ಅದರಂತೆ ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅಹಿಂಸಾತ್ಮಕವಾಗಿ ಹೋರಾಟ ಮುಂದುವರಿಸಬಹುದು. ಆದರೆ ನೂತನ ವಿವಾದಾತ್ಮಕ ಕೃಷಿ ಕಾನೂನಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ನಿಷ್ಪಕ್ಷಪಾತ ಮತ್ತು ಸ್ವತಂತ್ರ ಸಮಿತಿ ರಚಿಸಬೇಕು ಎಂದು ಅಭಿಪ್ರಾಯಪಟ್ಟಿದೆ.