ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಕುರಿತಾಗಿ ಸಚಿವ ಸಂಪುಟ ಉಪ ಸಮಿತಿ ಮೊದಲ ಸಭೆ ನಡೆದಿದೆ.
ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತಾಗಿ ಅವಲೋಕನ ನಡೆಸಲಾಗಿದೆ. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಅಪೇಕ್ಷಿತ ಎಲ್ಲಾ ವರದಿಗಳು, ಸುಪ್ರೀಂ ಕೋರ್ಟ್ ತೀರ್ಪುಗಳು ಮೊದಲಾದ ಮಾಹಿತಿ ಲಭ್ಯವಾದ ನಂತರ ಸಂಪುಟ ಉಪ ಸಮಿತಿಯ ಮುಂದಿನ ಸಭೆಯ ದಿನಾಂಕ ನಿಗದಿ ಮಾಡಲಾಗುವುದು.
ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ಆಯೋಗ ಮೀಸಲಾತಿ ಹೆಚ್ಚಳ ಕುರಿತಾಗಿ ನೀಡಿದ ವರದಿ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಗಿದೆ. ಇದರೊಂದಿಗೆ ರಾಜ್ಯವಾರು ಮೀಸಲಾತಿ ಪ್ರಮಾಣ ಮತ್ತು ಮೀಸಲಾತಿ ಹೆಚ್ಚಳಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವುದರ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡಲು ಸಭೆಯಲ್ಲಿ ಸೂಚಿಸಲಾಗಿದೆ ಎಂದು ಹೇಳಲಾಗಿದೆ.