ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೇಳಿಬರುತ್ತಿದ್ದ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ. ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಪುನರುಚ್ಚರಿಸಿರುವ ಅವರು, ನಾಯಕತ್ವ ಬದಲಾವಣೆ ಕುರಿತು ಗೊಂದಲ ಸೃಷ್ಟಿಸುತ್ತಿರುವವರಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.
ಯಡಿಯೂರಪ್ಪನವರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಅವರ ಕಾರ್ಯ ನಿರ್ವಹಣೆ ಶ್ಲಾಘನೀಯವಾಗಿದೆ ಎಂದು ಮಾಧ್ಯಮ ಸಂದರ್ಶನದಲ್ಲಿ ಹೇಳಿರುವ ಅರುಣ್ ಸಿಂಗ್, ಇತ್ತೀಚೆಗೆ ನಡೆದ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಅರುಣ್ ಸಿಂಗ್ ಅವರ ಹೇಳಿಕೆಯಿಂದಾಗಿ ಯಡಿಯೂರಪ್ಪನವರ ಮುಂದಿನ ಹಾದಿ ಸುಗಮವಾಗಿದ್ದು, ಪೂರ್ಣಾವಧಿ ಅವರೇ ಸಿಎಂ ಆಗಿ ಮುಂದುವರೆಯುವುದು ಖಚಿತವಾಗಿದೆ. ಹೀಗಾಗಿ ಪದೇ ಪದೇ ನಾಯಕತ್ವ ಬದಲಾವಣೆ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಮುಂದಿನ ದಿನಗಳಲ್ಲಿ ತಮ್ಮ ಹೇಳಿಕೆಯನ್ನು ಬಸನಗೌಡ ಪಾಟೀಲ್ ಯತ್ನಾಳ್ ಪುನರುಚ್ಚರಿಸಿದರೆ ಅವರ ವಿರುದ್ಧ ಬಿಜೆಪಿ ನಾಯಕರು ಕ್ರಮ ಕೈಗೊಳ್ಳುವುದು ನಿಶ್ಚಿತ ಎನ್ನಲಾಗಿದೆ.