ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ರೈತರು ನಿರಂತರ ಹೋರಾಟ ಕೈಗೊಂಡಿದ್ದು, ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯುವ ನಿರೀಕ್ಷೆಯಲ್ಲಿದ್ದಾರೆ.
ಆದರೆ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ರೈತರೊಂದಿಗೆ ನಡೆದ 8 ನೇ ಸುತ್ತಿನ ಮಾತುಕತೆ ಮುರಿದು ಬಿದ್ದಿದ್ದು, ಜನವರಿ 15 ಕ್ಕೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಾಗುವುದು. ತಿದ್ದುಪಡಿ ಕಾಯ್ದೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ರೈತರು ದೆಹಲಿ ಗಡಿಭಾಗದಲ್ಲಿ ಒಂದೂವರೆ ತಿಂಗಳಿನಿಂದ ಹೋರಾಟ ಮುಂದುವರಿಸಿದ್ದಾರೆ. ಹೋರಾಟ ನಿರತ ರೈತ ಮುಖಂಡರೊಂದಿಗೆ ಇಂದು ನಡೆಸಲಾದ ಮಾತುಕತೆ ವಿಫಲವಾಗಿದೆ.
ಈ ವೇಳೆ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈತರಿಗೆ ಕಾನೂನಿನ ಅಂಶಗಳನ್ನು ಮನವರಿಕೆ ಮಾಡಿಕೊಡಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.