ಚಿತ್ರದುರ್ಗ: ಮಾಸಾಶನಕ್ಕೆ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಶೀಘ್ರವೇ ರದ್ದು ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಜಿಯನ್ನು ಪಡೆದುಕೊಂಡು ಮಾಸಾಶನ ನೀಡುವ ವ್ಯವಸ್ಥೆ ರದ್ದಾಗಲಿದೆ. ಅರ್ಹ ಫಲಾನುಭವಿಗಳನ್ನು ಸರ್ಕಾರದಿಂದಲೇ ಗುರುತಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನಕ್ಕೆ ಸರ್ಕಾರ ಪ್ರತಿವರ್ಷ 7500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಇದರಲ್ಲಿ ಸುಮಾರು 400 ಕೋಟಿ ರೂಪಾಯಿಯಷ್ಟು ಪೋಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೋಗಸ್ ಖಾತೆಗಳ ಪತ್ತೆ ಕಾರ್ಯ ನಡೆದಿದೆ. ಮಧ್ಯವರ್ತಿಗಳ ಹಾವಳಿ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಮಾಸಾಶನಕ್ಕೆ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ರದ್ದು ಮಾಡಲಾಗುತ್ತದೆ. ಅರ್ಹ ಫಲಾನುಭವಿಗಳನ್ನು ಸರ್ಕಾರವೇ ಗುರುತಿಸಿ ಮಾಸಾಶನ ನೀಡಲಿದೆ ಎಂದು ಹೇಳಿದ್ದಾರೆ.
ಮಾಸಾಶನ ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡಲಾಗುತ್ತಿದೆ. ಉಡುಪಿ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಕೈಗೊಂಡ ಪ್ರಾಯೋಗಿಕ ಯೋಜನೆ ಯಶಸ್ವಿಯಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಫಲಾನುಭವಿಗಳು ಅರ್ಜಿ ಹಿಡಿದುಕೊಂಡು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲಾಗುವುದು ಎಂದು ಹೇಳಿದ್ದಾರೆ.