ವಿಜಯಪುರ: ಯುಗಾದಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದು, ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.
ಹೀಗೆಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುವುದು ಖಚಿತವಾಗಿದ್ದು, ಇದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ಹುಣಸೋಡು ಕಲ್ಲು ಕ್ವಾರೆ ಸ್ಫೋಟ ಪ್ರಕರಣದ ಬಗ್ಗೆ ಮಾತನಾಡಿ, ಅಕಸ್ಮಾತ್ ನಗರದೊಳಗೆ ಸ್ಪೋಟವಾಗಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು. ಅಕ್ರಮ ಗಣಿಗಾರಿಕೆಯಲ್ಲಿ ಯಾರು ಇದ್ದಾರೆ ಎಂಬುದು ಗೊತ್ತಾಗಬೇಕು. ಇದಕ್ಕಾಗಿ ಸಮಗ್ರ ತನಿಖೆಯಾಗಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೇಳಿದ್ದಾರೆ.