ಬೆಂಗಳೂರು: 2019 – 20 ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಎಲ್ಲಾ 14,183 ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರೆಸಲು ಕ್ರಮಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ಶಾಸಕ ಮರಿತಿಬ್ಬೇಗೌಡ ಅವರು, ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರಿಗೆ ಮಾತ್ರ ಮುಂದುವರೆಸಲು ಆದೇಶ ಹೊರಡಿಸಲಾಗಿದೆ. ಇದರಿಂದಾಗಿ ಉಳಿದ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಕೂಡ ಇದರ ಬಗ್ಗೆ ಪ್ರಸ್ತಾಪಿಸಿ ಎಲ್ಲಾ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2019 – 20 ರಲ್ಲಿ ಕಾರ್ಯನಿರ್ವಹಿಸಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿನಲ್ಲಿ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಐದು ತಿಂಗಳ ಗೌರವ ಧನ ಬಿಡುಗಡೆ ಮಾಡಲಾಗಿದೆ. ಹಣಕಾಸು ಇಲಾಖೆಯ ಸೂಚನೆಯಂತೆ ಶೇಕಡ 50 ರಷ್ಟು ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ ನೀಡಲಾಗಿದ್ದು, ಶೀಘ್ರವೇ ಎಲ್ಲಾ ಉಪನ್ಯಾಸಕರ ನೇಮಕಾತಿಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.