ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಮಾಡಲಾಗಿದೆ. ಎಕರೆವಾರು ಖರೀದಿ ಮಿತಿ ಮುಂದುವರೆಸಿ ಗರಿಷ್ಠ ಖರೀದಿ ಮಿತಿಯನ್ನು ರದ್ದುಪಡಿಸಲಾಗಿದೆ. ಇದರಿಂದ ದೊಡ್ಡ ರೈತರಿಗೆ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಂಬಲ ಬೆಲೆ ನಿಗದಿ ಕುರಿತ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಭತ್ತ, ರಾಗಿ, ಬಿಳಿ ಜೋಳ ಖರೀದಿ ಮಿತಿ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ.
ಗುಣಮಟ್ಟದ ತೊಗರಿಗೆ ಪ್ರತಿ ಕ್ವಿಂಟಲ್ ಗೆ 6000 ರೂ. ದರದಲ್ಲಿ ಪ್ರತಿ ಎಕರೆಗೆ 7.5 ಕ್ವಿಂಟಲ್ ಗರಿಷ್ಠ ಪ್ರಮಾಣ ಮತ್ತು ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ. ಖರೀದಿ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.
ಬೆಂಬಲ ಬೆಲೆಯಡಿ ಶೇಂಗಾ ಖರೀದಿ ಅವಧಿ ಮುಕ್ತಾಯವಾಗಿದ್ದು ಮತ್ತೊಂದು ತಿಂಗಳು ವಿಸ್ತರಣೆ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸಭೆಯಲ್ಲಿ ಆಹಾರ ಸಚಿವ ಉಮೇಶ್ ಕತ್ತಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಮೊದಲಾದವರು ಭಾಗಿಯಾಗಿದ್ದರು.