ದಾವಣಗೆರೆ: ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಆರೋಗ್ಯ ಸಿಬ್ಬಂದಿಗಳಿಗೆ ಸರ್ಕಾರಿ ಸೌಲಭ್ಯ ಕಡಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದ್ದಾರೆ.
ದೇಶಾದ್ಯಂತ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಕೆಲವು ಆರೋಗ್ಯ ಸಿಬ್ಬಂದಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದು, ಅಂಥವರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಇದುವರೆಗೂ ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಸಿಬ್ಬಂದಿ ಕೂಡಲೇ ಲಸಿಕಾಕ ಕೇಂದ್ರಗಳಿಗೆ ತೆರಳಿ ಲಸಿಕೆ ಹಾಕಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದು ಎಂದು ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 18,920 ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇದುವರೆಗೆ 9970 ಮಂದಿಗೆ ಮಾತ್ರ ಲಸಿಕೆ ನೀಡಲಾಗಿದೆ. ಎರಡನೇ ಹಂತದಲ್ಲಿ ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.