ನೂತನ ಪಿಂಚಣಿ ಯೋಜನೆ ರದ್ದು ಮಾಡಿ ಹಳೆಯ ಪಿಂಚಣಿ ಯೋಜನೆ ಮುಂದುವರಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಪ್ರಶ್ನೆಗೆ ಸಿಎಂ ಪರವಾಗಿ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿದ್ದು, ನೂತನ ಪಿಂಚಣಿ ಯೋಜನೆ -NPS ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ನೂತನ ಪಿಂಚಣಿ ಯೋಜನೆಯಲ್ಲಿ ಕೆಲವು ಬದಲಾವಣೆ ಇಲ್ಲವೇ ಮಾರ್ಪಾಡು ಮಾಡಲು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ವರದಿಯ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
2006 ರ ಏಪ್ರಿಲ್ 1 ರ ನಂತರ ನೇಮಕವಾದವರಿಗೆ ಹೊಸ ಪಿಂಚಣಿ ಯೋಜನೆ ಅನ್ವಯವಾಗುತ್ತದೆ. ಇದನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮುಂದುವರೆಸಬೇಕೆಂಬುದು ನೌಕರರ ಬೇಡಿಕೆಯಾಗಿದೆ.