ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.
ರಾಜ್ಯದಲ್ಲಿ ಸೀಲ್ ಡೌನ್ ಮತ್ತು ನೈಟ್ ಕರ್ಫ್ಯೂ ಜಾರಿ ಮಾಡದಂತೆ ತಜ್ಞರು ಸಲಹೆ ನೀಡಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದಲೂ ಕೂಡ ನೈಟ್ ಕರ್ಫ್ಯೂ ಜಾರಿ ಮಾಡದಂತೆ ಸಲಹೆ ನೀಡಲಾಗಿದೆ ಎನ್ನಲಾಗಿದೆ.
ಸಭೆ ನಂತರ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇದು ಎರಡನೇ ಅಲೆಯ ಮುನ್ಸೂಚನೆ ಎಂದು ತಜ್ಞರು ಹೇಳಿದ್ದಾರೆ. ಮಹಾರಾಷ್ಟ್ರ, ಕೇರಳದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಮಾಡದಿದ್ದರೆ ದಂಡ ವಿಧಿಸಲಾಗುವುದು. ಮತ್ತೊಮ್ಮೆ ಹಿಂದಿನ ಸ್ಥಿತಿ ಮರುಕಳಿಸದಂತೆ ಜನ ಎಚ್ಚರಿಕೆ ವಹಿಸಬೇಕೆಂದು ಸಿಎಂ ತಿಳಿಸಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಕೋರೋನಾ ಸೋಂಕು ಏರಿಕೆಯಾಗುತ್ತಿದೆ. ನಿಯಮ ಉಲ್ಲಂಘನೆ ಮಾಡುವವರಿಗೆ ಕಟ್ಟುನಿಟ್ಟಾಗಿ ದಂಡ ವಿಧಿಸಲಾಗುವುದು. ಮತ್ತೊಮ್ಮೆ ಲಾಕ್ ಡೌನ್ ಮಾಡದಿರಲು ಜನರ ಸಹಕಾರ ಮುಖ್ಯವೆಂದು ಹೇಳಿದ್ದಾರೆ.