ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಟಿಕೆಟ್ ಆಕಾಂಕ್ಷಿಯಾಗಿದ್ದ ಕೇರಳ ಮಹಿಳಾ ಕಾಂಗ್ರೆಸ್ ಮುಖ್ಯಸ್ಥರಿಗೇ ಟಿಕೆಟ್ ಕೈತಪ್ಪಿದ್ದು, ಇದರಿಂದ ಬೇಸರಗೊಂಡಿರುವ ಅವರು ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ನವದೆಹಲಿಯಲ್ಲಿ ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಎಟ್ಟುಮಣ್ಣೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೇರಳ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಲತಿಕಾ ಸುಭಾಷ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದರಿಂದ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಲತಿಕಾ ಪಕ್ಷದ ಕಚೇರಿ ಮುಂಭಾಗದಲ್ಲಿ ಕುಳಿತು ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ.
ರಾಸಲೀಲೆ ಸಿಡಿ ಪ್ರಕರಣ: ಜಾಹೀರಾತು ಸಂಸ್ಥೆಗೆ SIT ನೋಟಿಸ್
ಈ ವೇಳೆ ಮಾತನಾಡಿದ ಲತಿಕಾ ಸುಭಾಷ್, ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಕಡಿಮೆಯಿದ್ದರೂ ನನಗೆ ಟಿಕೆಟ್ ನಿರಾಕರಿಸಲಾಗಿದೆ. ಈ ಬೆಳವಣಿಗೆ ನನಗೆ ಬೇಸರ ತಂದಿದೆ. ಹಾಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇನ್ನು ಬೇರೆ ಯಾವುದೇ ಪಕ್ಷ ಸೇರುವ ಯೋಜನೆಯೂ ನನಗಿಲ್ಲ ಎಂದು ಹೇಳಿದ್ದಾರೆ.