ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಯಡಿ ಅನಧಿಕೃತ ಸಾಗುವಳಿದಾರರಿಗೆ ಅರ್ಜಿ ಸಲ್ಲಿಕೆಗೆ ಅನುಮತಿ ನೀಡಲು ಕರ್ನಾಟಕ ಭೂಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದ್ದು, ಸಕ್ರಮ ಹೊಸ ಅರ್ಜಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಅರ್ಜಿ ಸಲ್ಲಿಕೆಯಾದ ಅರ್ಜಿಗಳನ್ನು ಅಪ್ಲೋಡ್ ಮಾಡಲು ಅವಕಾಶ ನೀಡಲಾಗುವುದು. ಅಕ್ರಮ-ಸಕ್ರಮ ಯೋಜನೆಯಡಿ ನಮೂನೆ 57 ರಡಿ 8,02,234 ಅರ್ಜಿಗಳು ಸ್ವೀಕೃತಗೊಂಡಿವೆ. 2018ರ ಮಾರ್ಚ್ 15 ರಿಂದ 2019 ರ ಮಾರ್ಚ್ 16 ರವರೆಗೆ ಅರ್ಜಿ ಸಲ್ಲಿಕೆಗೆ ಒಂದು ವರ್ಷ ಅವಕಾಶ ನೀಡಲಾಗಿತ್ತು. 2019ರ ಮಾ. 10 ರಿಂದ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದ್ದರೂ ರೈತರ ಹಿತದೃಷ್ಟಿಯಿಂದ ಕೆಲವು ಕಡೆ ಅರ್ಜಿ ಸ್ವೀಕರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.