ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಕುರಿತು ಪಕ್ಷದ ಪ್ರಮುಖರ ಸಭೆಯಲ್ಲಿ ಚರ್ಚೆ ನಡೆದಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ವಿಜಯೇಂದ್ರ ಅವರನ್ನು ಬಸವಕಲ್ಯಾಣ ಕ್ಷೇತ್ರಕ್ಕೆ ಕಣಕ್ಕಿಳಿಸಿದರೆ ಗೆಲುವಿಗೆ ಅನುಕೂಲವಾಗಲಿದೆ ಎಂದು ಚರ್ಚೆ ನಡೆದಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಪ್ರಹ್ಲಾದ್ ಜೋಶಿ ಮತ್ತು ಡಿಸಿಎಂ ಗೋವಿಂದ ಕಾರಜೋಳ, ಸಚಿವ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಈ ಕುರಿತಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ.
ಬಸವಕಲ್ಯಾಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ಅನುಕಂಪದ ಅಲೆಯ ನಡುವೆ ಬಿಜೆಪಿಗೆ ಗೆಲುವು ತಂದುಕೊಡಲು ವಿಜಯೇಂದ್ರರನ್ನು ಕಣಕ್ಕಿಳಿಸಲು ಕೆಲವು ನಾಯಕರು ಚರ್ಚೆ ನಡೆಸಿದ್ದಾರೆನ್ನಲಾಗಿದೆ.
ಈ ಕ್ಷೇತ್ರದಲ್ಲಿ ಪ್ರಮುಖವಾಗಿರುವ ಮರಾಠ ಮತಗಳನ್ನು ಸೆಳೆಯುವ ಬಗ್ಗೆಯೂ ಚರ್ಚೆ ನಡೆದಿದೆ. ಮರಾಠ ನಿಗಮ ರಚನೆ ಮಾಡಿದ್ದರಿಂದ ವಿಜಯೇಂದ್ರ ಅವರನ್ನು ಅಭ್ಯರ್ಥಿಯಾಗಿಸಿದ್ದಲ್ಲಿ ಗೆಲುವಿಗೆ ಅನುಕೂಲವಾಗುತ್ತದೆ ಎನ್ನಲಾಗಿದ್ದು ವಿಜಯೇಂದ್ರ ಅವರನ್ನೇ ಕಣಕ್ಕಿಳಿಸುವ ಕುರಿತು ಚರ್ಚೆ ನಡೆದಿದೆ. ಮಸ್ಕಿ ಕ್ಷೇತ್ರದಿಂದ ಪ್ರತಾಪಗೌಡ ಪಾಟೀಲ ಅವರ ಹೆಸರನ್ನು ಮಾತ್ರ ಕಳುಹಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಶ್ರದ್ಧಾ ಶೆಟ್ಟರ್ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.