ಬೆಳಗಾವಿ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಯಾರಿಗೆ ಅನುದಾನ ದೊರೆತಿಲ್ಲವೋ ಅವರೆಲ್ಲರಿಗೂ ಅನುದಾನ ಬಿಡುಗಡೆ ಮಾಡಲಾಗುವುದು. ಸರ್ಕಾರದ ಬೊಕ್ಕಸಕ್ಕೆ ತೊಂದರೆಯಾದರೂ ಚಿಂತೆಯಿಲ್ಲ. ಅತಿವೃಷ್ಟಿ ಸಂತ್ರಸ್ತರಿಗೆ ಸೂರು ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಳಗಾವಿಯ ಗಾಂಧಿಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಾತ್ರವಲ್ಲದೆ, ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದ ಎಲ್ಲರಿಗೂ ಮನೆ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ದಿ. ಸುರೇಶ್ ಅಂಗಡಿ ಬೆಳಗಾವಿಯಲ್ಲಿ ಪಕ್ಷವನ್ನು ಕಟ್ಟಿ ಮಾದರಿ ಜಿಲ್ಲೆಯನ್ನಾಗಿ ರೂಪಿಸಿದ್ದಾರೆ. ಇದು ನಮ್ಮ ಚುನಾವಣೆ ಎಂದು ಭಾವಿಸಿ ಮಂಗಳಾ ಅಂಗಡಿ ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಬೇರೆ ಪಕ್ಷಗಳ ಅಭ್ಯರ್ಥಿಯ ಹೆಸರಿನ ಬಗ್ಗೆ ಪ್ರಸ್ತಾಪ ಮಾಡುವುದಿಲ್ಲ. ಮಹಿಳೆಯರು ಸೇರಿದಂತೆ ಪಕ್ಷದ ಕಾರ್ಯಕರ್ತರೆಲ್ಲರೂ ಹೆಚ್ಚಿನ ಶ್ರಮವಹಿಸಿ ಗೆಲುವಿಗೆ ಶ್ರಮಿಸಬೇಕು. ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಮತ್ತು ಚುನಾವಣೆಯ ಮಹತ್ವದ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.