ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಅಸಮಾಧಾನದ ಹೊಗೆ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗಿಬಿದ್ದಿದ್ದು, ಸಿಎಂ ವಿರುದ್ಧ ವರಿಷ್ಠರಿಗೆ ದೂರು ನೀಡಿದ್ದಾರೆ.
ಇಲಾಖೆಯಲ್ಲಿ ವಿನಾಕಾರಣ ಹಸ್ತಕ್ಷೇಪ, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ಪ್ರಸಕ್ತ ಆಡಳಿತ ವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿ ಸಚಿವ ಕೆ.ಎಸ್.ಈಶ್ವರಪ್ಪ ದಾಖಲೆ ಸಮೇತ 2 ಪುಟಗಳ ದೂರನ್ನು ವರಿಷ್ಠರಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆ ಮಾಡಬೇಕಿದ್ದ ಹಣವನ್ನು ಸಚಿವರಿಗೂ ಕೇಳದೇ ಸಿಎಂ ಯಡಿಯೂರಪ್ಪ, ಶಾಸಕರುಗಳ ಕ್ಷೇತ್ರಗಳಿಗೆ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆಗೆ 1200 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಆದರೆ ಈ ಹಣವನ್ನು ವಿಪಕ್ಷ ಶಾಸಕರ ಕ್ಷೇತ್ರಗಳಿಗೆ ಬಿಡುಗಡೆ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಈಶ್ವರಪ್ಪ ಪತ್ರದ ಮೂಲಕ ದೂರು ನೀಡಿದ್ದಾರೆ. ಮಾತ್ರವಲ್ಲ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೂ ದೂರು ನೀಡಿದ್ದಾರೆ ಎನ್ನಲಾಗಿದೆ.