ಮುಂಬೈ: ಪರೀಕ್ಷೆ ನಡೆಸದೆ ಒಂದರಿಂದ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಮಹಾರಾಷ್ಟ್ರ ಸರ್ಕಾರ ಪಾಸ್ ಮಾಡಿದೆ. ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕವಾಡ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಂದರಿಂದ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿದೆ.
9 ಮತ್ತು 11 ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೆ, ಬೇಡವೇ ಎಂಬುದರ ಕುರಿತಾಗಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು. 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಪ್ರಕಟವಾದ ವೇಳಾಪಟ್ಟಿಯಂತೆ ನಡೆಯಲಿವೆ. ಕಡಿತಗೊಳಿಸಲಾಗಿರುವ ಪಠ್ಯದೊಂದಿಗೆ ವಿನಾಯಿತಿ ನೀಡಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.