ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೆ ತಂದಿದೆ. ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಶೇಕಡ 100 ರಷ್ಟು ಪ್ರೇಕ್ಷಕರಿಗೆ ನಿರ್ಬಂಧ ಹೇರಲಾಗಿದ್ದು, ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಚಿತ್ರರಂಗದ ಗಣ್ಯರು ಸಿಎಂ ಭೇಟಿಯಾಗಿ ನಿರ್ಧಾರ ಬದಲಿಸುವಂತೆ ಮನವಿ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಬಿಡುಗಡೆಯಾದ ಎರಡು ದಿನದಲ್ಲೇ ಸರ್ಕಾರ ಶೇಕಡ 50 ರಷ್ಟು ಪ್ರೇಕ್ಷಕರಿಗೆ ನಿರ್ಬಂಧ ಹೇರಿರುವುದು ಚಿತ್ರರಂಗಕ್ಕೆ ಶಾಕ್ ನೀಡಿದೆ.
ಈ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜಕುಮಾರ್ ಹಾಗೂ ‘ಯುವರತ್ನ’ ಚಿತ್ರತಂಡದಿಂದ ಸಿಎಂ ಭೇಟಿಯಾಗಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಲಾಗಿದೆ. ಕೊರೋನಾ ನಿಯಮಗಳನ್ನು ಪಾಲಿಸುವುದರೊಂದಿಗೆ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರು ಸಿನಿಮಾ ನೋಡುತ್ತಿದ್ದಾರೆ. ಹಾಗಾಗಿ 50 ಮಿತಿ ಕೈಬಿಟ್ಟು ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಗಿದೆ.
ಮೊದಲೇ ಸಂಕಷ್ಟದಲ್ಲಿರುವ ಚಿತ್ರರಂಗಕ್ಕೆ ಅನುಕೂಲ ಮಾಡಿಕೊಡಲು ಶೇಕಡ 50 ಮಿತಿ ತೆಗೆದು ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ನೀಡಲು ಕೋರಲಾಗಿದೆ.
ಪುನೀತ್ ಇಂದು ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಸಂದರ್ಭದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಬಸವರಾಜ ಬೊಮ್ಮಾಯಿ, ನಾರಾಯಣಗೌಡ ಇದ್ದರು.